Top

ಕೊಡಗಿನ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ

ಕೊಡಗಿನ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ
X

ಮಡಿಕೇರಿ : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪಿರಿಯಾಪಟ್ಟಣದಿಂದ ಮಡಿಕೇರಿಗೆ ಹೋಗುವ ಮಾರ್ಗದಲ್ಲಿ ಆವರ್ತಿ, ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆಗಳಿಗೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಾಯಿ ಬಡಾವಣೆಯಲ್ಲಿ 150-200 ಮನೆಗಳು ಹಾಗೂ ಕುವೆಂಪು ಬಡಾವಣೆಯಲ್ಲಿ ಸುಮಾರು 400 ಮನೆಗಳು ಜಲಾವೃತವಾಗಿದ್ದು, ಸಂತ್ರಸ್ತರಿಗೆ ಎಲ್ಲ ಅಗತ್ಯ ನೆರವು ಕಲ್ಪಿಸುವುದಾಗಿ ಮುಖ್ಯಮಂತ್ರಿಗಳು ಸಾಂತ್ವನ ನುಡಿದರು.

ಶುಂಟಿಕೊಪ್ಪದ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಎರಡು ಸಾವಿರಕ್ಕೂ ಹೆಚ್ಚು ಜನರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು ಕೊಡಗು ಜಿಲ್ಲೆ ರಾಜ್ಯದಲ್ಲಿ ಅತ್ಯಂತ ವಿಶಿಷ್ಟ ಸ್ಥಾನ ಪಡೆದ ಜಿಲ್ಲೆ. ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ತನ್ನದೇ ಛಾಪು ಮೂಡಿಸಿದೆ ಎಂದರು.

ಅಲ್ಲದೇ ಕೊಡಗು ವೀರ ಯೋಧರನ್ನು ನೀಡಿದ ಜಿಲ್ಲೆಯಾಗಿದೆ. ಇಂತಹ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತದಿಂದ ದುರಂತ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ರಾಜ್ಯ ಸರ್ಕಾರವು ಕೊಡಗಿನ ಜನರ ರಕ್ಷಣೆ ಹಾಗೂ ಪುನರ್ವಸತಿ ಕಲ್ಪಿಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಿದೆ. ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಅಭಯ ನೀಡಿದರು.

ಅಗತ್ಯ ಸಂದರ್ಭದಲ್ಲಿ ನಿಯಮಗಳನ್ನು ಸಡಿಲಿಸಿ ಪುನರ್ವಸತಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ನಿನ್ನೆ ಕೊಡಗಿನ ಭಾಗಶಃ ಸಮೀಕ್ಷೆ ನಡೆಸಲಷ್ಟೇ ಸಾಧ್ಯವಾಯಿತು. ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಶಿವಮೊಗ್ಗ, ಚಿಕ್ಕಮಗಳೂರು ಭೇಟಿ ರದ್ದು ಪಡಿಸಿ ಮತ್ತೆ ಕೊಡಗಿಗೆ ಭೇಟಿ ನೀಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Next Story

RELATED STORIES