ಮೌನಿ ಮೋದಿ ಬಾಯ್ಬಿಡಲಿ: ರಾಹುಲ್ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ ಹಾಗೂ ರಫೆಲ್ ಯುದ್ಧ ವಿಮಾನ ಖರೀದಿ ಹಗರಣದ ಬಗ್ಗೆ ಮೌನ ತಾಳಿರುವುದು ಯಾಕೆ? ಅವರು ಈ ಬಗ್ಗೆ ಸಾರ್ವಜನಿಕರಿಗೆ ಉತ್ತರಿಸಲಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಸೋಮವಾರ ದೆಹಲಿಯಲ್ಲಿ ಭಾರತ್ ಬಂದ್ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಹುಲ್ ಗಾಂಧಿ ಮಾತನಾಡಿ, ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶವನ್ನು ಒಡೆದು ಆಳುತ್ತಿದೆ. ಇದಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಬುದ್ಧಿ ಕಲಿಸಲಿದ್ದಾರೆ ಎಂದರು.
70 ವರ್ಷಗಳಲ್ಲಿ ಆಗದೇ ಇದ್ದದ್ದು ಕಳೆದ ನಾಲ್ಕು ವರ್ಷಗಳಲ್ಲಿ ಸಾಧಿಸಿದ್ದೇವೆ ಎಂದು ಮೋದಿ ಹೇಳಿಕೊಳ್ಳುತ್ತಾರೆ. ಇದೇನಾ ನಿಮ್ಮ ಸಾಧನೆ? ಮೋದಿ ಸರಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗೂಡಲಿದ್ದೇವೆ ಎಂದು ರಾಹುಲ್ ಹೇಳಿದರು.
ಇದೇ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪ್ರಧಾನಿ ಮೋದಿ ಎಲ್ಲದರಲ್ಲೂ ನಿಯಮ ಮೀರಿದ್ದಾರೆ. ಆದರೆ ಇದು ಯಾವುದರ ಹಿಂದೆಯೂ ದೇಶದ ಹಿತಾಸಕ್ತಿ ಇಲ್ಲ ಎಂದು ಆರೋಪಿಸಿದರು.
ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜೊತೆಗೆ ಅಭಿವೃದ್ಧಿಗಾಗಿ ಪ್ರತಿಪಕ್ಷಗಳು ಒಂದಾಗುತ್ತಿವೆ ಎಂದು ಮನಮೋಹನ್ ಸಿಂಗ್ ಹೇಳಿದರು.