ಶೀಘ್ರದಲ್ಲೇ ತೃತೀಯ ರಂಗದ ಸಭೆ: ದೇವೇಗೌಡ

ಬಿಜೆಪಿ ವಿರುದ್ಧ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರ ಸಭೆ ನಡೆಸಲಿದ್ದೇವೆ. ನಂತರ ತೃತೀಯ ರಂಗದ ಬಗ್ಗೆ ತೀರ್ಮಾನಿಸಲಿದ್ದೇವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್​.ಡಿ. ದೇವೇಗೌಡ ತಿಳಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಸುದೀರ್ಘ 45 ನಿಮಿಷಗಳ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಚಂದ್ರಬಾಬು ನಾಯ್ಡು ತಮ್ಮನ್ನು ಭೇಟಿಯಾಗಿ ರಾಹುಲ್ ಗಾಂಧಿ, ಶರದ್ ಪವಾರ್, ಫಾರೂಕ್ ಅಬ್ದುಲ್ಲಾ, ಮಮತಾ ಬ್ಯಾನರ್ಜಿ ಸೇರಿದಂತೆ ದೇಶದ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರ ಸಭೆ ಕರೆಯಲು ವಿನಂತಿಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಸಭೆ ಕರೆಯಲು ನಿರ್ಧರಿಸಿದ್ದೇವೆ ಎಂದರು.

ತೃತೀಯ ರಂಗ ರಚನೆಗೆ ಕಾಂಗ್ರೆಸ್ ಪಕ್ಷ ಕೂಡ ಕೂಡ ಬೆಂಬಲ ನೀಡಿದೆ. 17 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್  ಮತ್ತಿತರೆ ಪಕ್ಷಗಳು ಅಧಿಕಾರದಲ್ಲಿವೆ. ಎಲ್ಲರೂ ಒಂದೇ ವೇದಿಕೆಯಡಿ ಚರ್ಚೆ ನಡೆಸಲಿದ್ದೇವೆ ಎಂದು ದೇವೇಗೌಡ ಹೇಳಿದರು.

ಇದೇ ವೇಳೆ ಮಾಧ್ಯಮಗಳ ಸಮ್ಮುಖದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ದೇವೇಗೌಡರು, ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದರು.

ಇದೇ ವೇಳೆ ಮಾತನಾಡಿದ ಚಂದ್ರಬಾಬು ನಾಯ್ಡು, ದೇಶದಲ್ಲಿ ಬಜೆಪಿಯೇತರ ಆಡಳಿತ ಇರುವ ರಾಜ್ಯಗಳಲ್ಲಿ ಸಾಮಾಜಿಕ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ. ಆಡಳಿತ ಪಕ್ಷಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

Recommended For You

Leave a Reply

Your email address will not be published. Required fields are marked *