Top

ರಾಜ್ಯಾದ್ಯಂತ ಟಿಪ್ಪು ಜಯಂತಿ: ಬಿಜೆಪಿ ಹಲವು ನಾಯಕರ ಬಂಧನ

ರಾಜ್ಯಾದ್ಯಂತ ಟಿಪ್ಪು ಜಯಂತಿ: ಬಿಜೆಪಿ ಹಲವು ನಾಯಕರ ಬಂಧನ
X

ರಾಜ್ಯ ಸರಕಾರ ಆಚರಿಸಿದ ಟಿಪ್ಪು ಜಯಂತಿಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲಲ್ಲ ಸಣ್ಣಪುಟ್ಟ ಘಟನೆ ಹೊರತುಪಡಿಸಿದರೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಮೈಸೂರು, ಕೊಡಗು ಸೇರಿದಂತೆ ನಾನಾ ಕಡೆ ನಿಷೇದಾಜ್ಞೆ ಜಾರಿಯಲ್ಲಿದ್ದರೂ ಬಿಜೆಪಿ ಪ್ರತಿಭಟನೆ ನಡೆಸಿದ್ದರಿಂದ ಕೆಲವು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿಯ ಕೋಟೆ ಆವರಣದಲ್ಲಿ ಏರ್ಪಡಿಸಿದ್ದ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಶಾಸಕ ಸಿಟಿ ರವಿ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪ್ರತಿಭಟನೆಯಲ್ಲಿ ಭಾಗವಹಿಸದೇ ಇರುವುದು ಅಚ್ಚರಿ ಮೂಡಿಸಿತು.

ರಾಜ್ಯ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿರುವುದರಿಂದ ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.

ಕೊಡಗಿನ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಇಂದು ಜಿಲ್ಲಾ ಬಂದ್‌ಗೆ ಕರೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಖಾಸಗಿ ಬಸ್‌, ಆಟೋಗಳ ಸಂಚಾರ ಸ್ಥಗಿತಗೊಳಿಸಲಿವೆ. ಆದರೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ.

ಇದೆಲ್ಲದರ ಮಧ್ಯೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮುಖ್ಯ ಸಮಾರಂಭ ಜರುಗಲಿದ್ದು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅನಾರೋಗ್ಯದ ಕಾರಣ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಹೊರಗುಳಿದಿದ್ದರು. ನವೆಂಬರ್ 11ರವರೆಗೆ ಮುಖ್ಯಮಂತ್ರಿಗಳ ಅಧಿಕೃತ ಕಾರ್ಯಕ್ರಮಗಳು ಯಾವುದೂ ಇಲ್ಲ. ಅವರು ತಮ್ಮ ಕುಟುಂಬದವರ ಜೊತೆ ಕಳೆಯಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

18ನೇ ಶತಮಾನದ ವಿವಾದಿತ ಮೈಸೂರು ರಾಜ್ಯವನ್ನು ಆಳಿದ ಟಿಪ್ಪುವಿನ ಜಯಂತಿಯನ್ನು 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಚರಿಸಲು ಪ್ರಾರಂಭಿಸಿತು.

ಚಿತ್ರದುರ್ಗದಲ್ಲಿ ಪ್ರತಿಭಟನೆಗೆ ಯತ್ನಿಸಿದ ಶಾಸಕ ತಿಪ್ಪಾರೆಡ್ಡಿ ಸೇರಿದಂತೆ 54 ಮಂದಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಿನ್ನೆ ಬಿಡುಗಡೆಗೊಳಿಸಿದರು. ಚಿಕ್ಕಮಗಳೂರಲ್ಲೂ ಪ್ರತಿಭಟನೆಗೆ ಯತ್ನಿಸಿದ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆಗೊಳಿಸಲಾಯಿತು.

ರಾಯಚೂರು ನಗರದಲ್ಲೂ ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು. ಬೆಳಗಾವಿಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಪ್ರತ್ಯೇಕ ಪ್ರತಿಭಟನೆ ನಡೆಸಿದ ಬಿಜೆಪಿ ಮತ್ತು ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ, ಕೊಪ್ಪಳ, ಹಾವೇರಿ, ಗದಗ, ಕಾರವಾರ, ಶಿವಮೊಗ್ಗ, ದಾವಣಗೆರೆ, ಉಡುಪಿ, ಮಡಿಕೇರಿ, ಮಂಗಳೂರು, ಉಡುಪಿ, ಬೀದರ್‌, ಯಾದಗಿರಿ, ಕಲಬುರಗಿ, ಹಾಸನ, ರಾಮನಗರ, ತುಮಕೂರು, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿಕ್ಕಮಗಳೂರು, ಕೋಲಾರ ನಗರಗಳಲ್ಲಿ ಪ್ರತಿಭಟನೆಗಳು ನಡೆದಿದ್ದು ಮೈತ್ರಿ ಸರ್ಕಾರದ ನಿಲುವಿಗೆ ಖಂಡನೆ ವ್ಯಕ್ತವಾಗಿದೆ.

Next Story

RELATED STORIES