ಡಿಕೆಶಿ ಹೆಗಲಿಗೆ ತೆಲಂಗಾಣ ಚುನಾವಣೆಯ ಜವಾಬ್ದಾರಿ

ತಮ್ಮ ಕಾರ್ಯತಂತ್ರದಿಂದ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ದಿನದಿಂದ ದಿನಕ್ಕೆ ಹೆಚ್ಚು ಪ್ರಬಲರಾಗುತ್ತಿರುವ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೆಗಲಿಗೆ ಎಐಸಿಸಿ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ.
ಗುಜರಾತ್ ರಾಜ್ಯಸಭಾ ಚುನಾವಣೆಯ ನಂತರ ಕಾರ್ಯತಂತ್ರ ರೂಪಿಸುವಲ್ಲಿ ಹೆ್ಚ್ಚು ಗಮನ ಸೆಳೆಯುತ್ತಿರುವ ಡಿ.ಕೆ.ಶಿವಕುಮಾರ್ ಹೆಗಲಿಗೆ ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಯ ಉಸ್ತುವಾರಿಯನ್ನು ವಹಿಸಲಾಗಿದೆ.
ಕಾಂಗ್ರೆಸ್ ಈಗಾಗಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು, ಸುಮಾರು 95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದೆ. 35ರಿಂದ 50 ಸ್ಥಾನಗಳಲ್ಲಿ ತೆಲುಗುದೇಶಂ ಕಣಕ್ಕಿಳಿಯಲಿದೆ.
ಬಿಜೆಪಿ ಕೂಡ ಹೆಚ್ಚು ಸ್ಥಾನ ಗೆಲ್ಲಲು ಕಾರ್ಯತಂತ್ರ ರೂಪಿಸಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ತೆಲಂಗಾಣ ವಿಧಾನಸಭೆ ಚುನಾವಣೆಯ ಉಸ್ತುವಾರಿ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹೈದರಾಬಾದ್ನಲ್ಲಿ ತಂಗಿದ್ದು, ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.
ರಾಜ್ಯದ ಉಪ ಚುನಾವಣೆಯಲ್ಲಿ ರಣತಂತ್ರ ರೂಪಿಸಿದಂತೆ ತೆಲಂಗಾಣ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನ ಗಳಿಸಲು ಡಿಕೆಶಿ ರಣತಂತ್ರ ರೂಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್ನ ಎನ್ಟಿಆರ್ ಮೈದಾನದಲ್ಲಿ ನಡೆದ ಕೋಟಿ ದೀಪೋತ್ಸವ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗಿಯಾಗಿದ್ದರು.